ಚಾಮರಾಜನಗರ: ಏಪ್ರಿಲ್ 10 ರಿಂದ 13 ರವರೆಗೆ ನಡೆಯುವ ಯುಗಾದಿ ಜಾತ್ರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಹೌದು. ಸಾರ್ವಜನಿಕರು ಹಾಗೂ ಭಕ್ತಾದಿಗಳ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ವೈರಸ್ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ನಿಷೇಧ ಹೇರಲಾಗಿದೆ.
ಜಾತ್ರಾ ಮಹೋತ್ಸವದ ವಿಶೇಷ ಪೂಜಾ ಕಾರ್ಯಗಳಿಗೆ ದೇವಾಲಯದ ಅರ್ಚಕರು, ಸಿಬ್ಬಂದಿ, ಸ್ಥಳೀಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಜಿಲ್ಲಾ ಹಾಗೂ ಅಂತರ ಜಿಲ್ಲಾ, ಹೊರ ರಾಜ್ಯದ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.