– ಸಾವು-ಬದುಕಿನ ನಡುವೆ ಹೋರಾಟ
ಮುಂಬೈ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅಂತೆಯೇ ಇದೀಗ ಮಹಾರಾಷ್ಟ್ರದ ನವಿ ಮುಂಬೈನಲ್ಲಿಯೂ ಕೂಡ ಅತ್ಯಾಚಾರ ಪ್ರಕರಣವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಯುವತಿ ಪೊವಾಯಿನಲ್ಲಿ ಮನೆಗೆಲಸ ಮಾಡುತ್ತಿದ್ದಳು. ಈಕೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ನಂತರ ಚಲಿಸುತ್ತಿದ್ದ ರೈಲಿನಿಂದ ಹೊರಗೆ ತಳ್ಳಿದ್ದಾರೆ. ಕಾಮುಕರ ಕಾಮದಾಟದಿಂದ ಸದ್ಯ 20 ವರ್ಷದ ಯುವತಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.
Advertisement
Advertisement
ವಾಶಿ ಕ್ರೀಕ್ ಸೇತುವೆಯ ಸಮೀಪ ಇರುವ ರೈಲ್ವೆ ಹಳಿ ಬಳಿ ಯುವತಿ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಈಕೆಯ ಮುಖದ ಮೇಲೆ ಗಾಯದ ಗುರುತುಗಳಿದ್ದವು. ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಕೆಲವರು ಯುವತಿಯ ಸ್ಥಿತಿಯನ್ನು ಗಮನಿಸಿದ್ದಾರೆ. ಅಲ್ಲದೆ ರೈಲ್ವೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಮಾಹಿತಿ ತಿಳಿದ ಕೂಡಲೇ ವಾಶಿ ಜಿಆರ್ಪಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಸಂತ್ರಸ್ತೆ ಇನ್ನೂ ಜೀವಂತವಾಗಿರುವುದು ಗೊತ್ತಾಗಿದೆ. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆಂದು ಮುಂಬೈನ ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
Advertisement
ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ರೈಲಿನಿಂದ ಹೊರಗೆ ತಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯುವತಿಯನ್ನು ಕೊಲೆ ಮಾಡಲೆಂದು ಚಲಿಸುತ್ತಿರುವ ರೈಲಿನಿಂದ ತಳ್ಳಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಯುವತಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಆಕೆಯಿಂದ ಹೇಳಿಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.