ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತಶ್ವಿಕ್ ಬುಷ್ರಾ ಮೃತ ದುರ್ದೈವಿ. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುವ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿದ್ದು, ಈ ವೇಳೆ ಹಿಂಬದಿಯಿಂದ ಬಂದಿರುವ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ಬುಷ್ರಾರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ನೆರೆದ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳು ರಸ್ತೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಲಾರಿ ಚಾಲಕ ಪಳನಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ವಿದ್ಯಾರ್ಥಿನಿ ತಂದೆ ಮುಷ್ತಕ್ ಅಹ್ಮದ್ ಅವರು ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.