ರಾಜ್ಯಗಳು ಸ್ಥಳೀಯವಾಗಿ ನಿರ್ಬಂಧ ಹೇರಬಹುದು – ಕೇಂದ್ರದಿಂದ ಹೊಸ ಕೋವಿಡ್ ಮಾರ್ಗಸೂಚಿ

Public TV
2 Min Read
Corona 8

ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಜಿಲ್ಲಾ, ಸಣ್ಣ ನಗರಗಳ ಮಟ್ಟದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮ ಹಾಗೂ ನಿರ್ಬಂಧಗಳ ಬಗ್ಗೆ ತಿಳಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಕೊರೊನಾ ಮಾರ್ಗಸೂಚಿಗಳು, ಕಂಟೈನ್ಮೆಂಟ್ ಝೋನ್, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಸಿದೆ. ಟೆಸ್ಟ್, ಟ್ರ್ಯಾಕ್, ಟ್ರೀಟ್ ಪದ್ಧತಿಯನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕಡ್ಡಾಯವಾಗಿ ಎಚ್ಚರಿಕೆ ವಹಿಸಬೇಕು ಎಂದು ಒತ್ತಿ ಹೇಳಿದೆ.

ಅಂತರಾಜ್ಯ ಹಾಗೂ ಅಂತರ್ ಜಿಲ್ಲೆಯ ಪ್ರಯಾಣಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಅಲ್ಲದೆ ಪಕ್ಕದ ದೇಶಗಳೊಂದಿಗೂ ವ್ಯಾಪಾರ, ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಇದಕ್ಕಾಗಿ ಯಾವುದೇ ಪ್ರತ್ಯೇಕ ಒಪ್ಪಿಗೆ, ಅನುಮತಿ, ಇ-ಪರ್ಮಿಟ್ ಬೇಕಿಲ್ಲ. ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕಳೆದ 5 ತಿಂಗಳಿಂದ ಕೊರೊನಾ ನಿಯಂತ್ರಣದಲ್ಲಿತ್ತು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿತ್ತು ಎಂದು ಸಚಿವಾಲಯ ತಿಳಿಸಿದೆ.

ಇದೀಗ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದನ್ನು ದೇಶದ ಕೆಲ ಭಾಗಗಳಲ್ಲಿ ನೋಡಿದ್ದೇವೆ. ಹೀಗಾಗಿ ಟೆಸ್ಟ್, ಟ್ರ್ಯಾಕ್, ಟ್ರೀಟ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನೋಡಬೇಕಿದೆ. ಅಲ್ಲದೆ ಲಸಿಕೆ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಬೇಕಿದ್ದು, ಅರ್ಹ ಎಲ್ಲರಿಗೂ ಲಸಿಕೆ ನೀಡುವ ಕಾರ್ಯವಾಗಬೇಕಿದೆ ಎಂದು ಆರೋಗ್ಯ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

CORONA 8 medium

ಹೊಸ ಮಾರ್ಗಸೂಚಿ ಪ್ರಕಾರ, ಆರ್‍ಟಿ-ಪಿಸಿಆರ್ ಟೆಸ್ಟ್ ಪ್ರಮಾಣ ಕಡಿಮೆ ಇರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಬೇಕು. ನಿಗದಿಪಡಿಸಿರುವುದರಲ್ಲಿ ಶೇ.70 ಅಥವಾ ಅದಕ್ಕೂ ಹೆಚ್ಚು ತಲುಪಬೇಕು. ಕೊರೊನಾ ಪ್ರಕರಣ ಪತ್ತೆಯಾಗುತ್ತಿದ್ದಂತೆ ಶೀಘ್ರ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಅಲ್ಲದೆ ಕೆಲಸದ ಸ್ಥಳಗಳಲ್ಲಿ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು ಎಂದು ಎಚ್ಚರಿಸಲಾಗಿದೆ.

CORONA 6 1

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಗಳು ಎಚ್ಚರ ವಹಿಸಬೇಕು. ನಿಯಮ ಪಾಲಿಸದಿದ್ದಲ್ಲಿ ಮುಲಾಜಿಲ್ಲದೆ ದಂಡ ವಿಧಿಸಬೇಕು. ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ, ಪರಿಸ್ಥಿತಿ ಹದಗೆಟ್ಟಿದೆ ಎಂದಾಗ ರಾಜ್ಯ ಸರ್ಕಾರ ಹಾಗೂ ಕೇಂದ್ರಡಳಿತ ಪ್ರದೇಶಗಳು ಸ್ಥಳೀಯವಾಗಿ ನಿರ್ಬಂಧ ಹೇರಬಹುದಾಗಿದೆ ಎಂದು ಗೃಹ ಸಚಿವಾಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

Corona

ಇಂತಹ ಕಠಿಣ ಪರಿಸ್ಥಿತಿಯಲ್ಲಿ, ಕೊರೊನಾ ಲಿಂಕ್ ಕತ್ತರಿಸಲು ಲಸಿಕೆ ಅಗತ್ಯವಾಗಿದೆ. ಅರ್ಹ ಎಲ್ಲರಿಗೂ ಲಸಿಕೆ ಸಿಗುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ಆದಷ್ಟು ಬೇಕ ಲಸಿಕೆ ನೀಡಬೇಕು ಎಂದು ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *