ನವದೆಹಲಿ: ರಾಜ್ಯಸಭೆ ಚುನಾವಣಾ ಕಣದಲ್ಲಿ ರಾಜ್ಯದ 4 ಅಭ್ಯರ್ಥಿಗಳು ಮಾತ್ರ ಇದ್ದಿದ್ದರಿಂದ ಅವಿರೋಧ ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್‍ಗೆ ಮತ್ತೆ ಪ್ರವೇಶ ಮಾಡಿದ್ದಾರೆ.
ಬಿಜೆಪಿಯ ಅಶೋಕ್ ಗಸ್ತಿ, ಈರಣ್ಣ ಕಡಾಡಿ, ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ಎಚ್.ಡಿ. ದೇವೇಗೌಡ ಅವರು ಅಷ್ಟೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಅಧಿಕೃತವಾಗಿ ಈ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಘೋಷಿಸಿದರು.
Advertisement
Advertisement
ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.
Advertisement
ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
Advertisement
ಹಿಂಭಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿ ನೀಡಿದ ಅವರು, ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೋಣ. ಅವರ ಪಕ್ಷ ಅವಕಾಶ ನೀಡುತ್ತೋ ಇಲ್ಲವೋ ನೊಡೋಣ. ಒಬ್ಬರ ಮೇಲೋಬ್ಬರು ರಾಜಕಾರಣ ಮಾಡೊದು ಬೇಡ ಎಂದು ಕುಟುಕಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ಮೊಮಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ತುಮಕೂರಿನಿಂದ ಸ್ಪರ್ಧಿಸಿದ್ದರು. ಆದರೆ ಅಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ವಿರುದ್ಧ ಸೋಲು ಕಂಡಿದ್ದರು. ಇತ್ತ ಮಲ್ಲಿಕಾರ್ಜುನ ಖರ್ಗೆ ಅವರು ಡಾ.ಉಮೇಶ್ ಜಾಧವ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಸದ್ಯ ರಾಜ್ಯಸಭಾ ಚುನಾವಣೆ ಮೂಲಕ ಈ ಇಬ್ಬರು ನಾಯಕರು ಸಂಸತ್ ಪ್ರವೇಶ ಮಾಡಿದ್ದಾರೆ.