ಲಕ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಅತ್ಯಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ದರೋಡೆ ಮಾಡಿ ತಾಯಿ- ಮಗಳನ್ನು ಹತ್ಯೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಉತ್ತರಪ್ರದೇಶದ ರಾಯ್ಬರೇಲಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನಸಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಹಜಿಪುರದಲ್ಲಿರುವ ಮನೆಗೆ ಕಳೆದ ರಾತ್ರಿ ದುಷ್ಕರ್ಮಿಗಳು ಏಕಾಏಕಿ ನುಗ್ಗಿ ದರೋಡೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ತಾಯಿ ಹಾಗೂ ಮಗಳನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾರೆ.
ಘಟನೆ ನಡೆದ ಸುದ್ದಿ ಹಬ್ಬುತ್ತಿದ್ದಂತೆಯೇ ನೂರಾರು ಮಂದಿ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಅಲ್ಲದೆ ಪೊಲೀಸರು ಹಾಗೂ ಇತರ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದರು.
ಇತ್ತ ತಾಯಿ ಹಾಗೂ ಮಗಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಮಹಿಳೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಗಳ ದೇಹಕ್ಕೆ ಗಂಭೀರವಾದ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆಗಾಗಿ ಈಗಾಗಲೇ ಐದು ತಂಡಗಳನ್ನು ರಚಿಸಲಾಗಿದೆ. ಗ್ರಾಮದ ಕೆಲ ವ್ಯಕ್ತಿಗಳೇ ಈ ಕೃತ್ಯ ಎಸಗಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.