ರೋಗ ಲಕ್ಷಣವಿಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ- ಸಿಎಂ ಬಿಎಸ್‍ವೈಗೆ ತಜ್ಞರ ಸಲಹೆಗಳೇನು..?

Public TV
2 Min Read
CM BSY a

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ವಿಜೃಂಭಿಸುತ್ತಿದೆ. ಈ ವೇಳೆಯಲ್ಲಿ ಲಾಕ್‍ಡೌನ್ ಜಾರಿ ಮಾಡುವ ಕುರಿತು ಬಾರಿ ಚರ್ಚೆ ನಡೆಯುತ್ತಿದೆ. ಇತ್ತ ಸೋಂಕಿನ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಲಭಿಸುವಂತೆ ಮಾಡಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಜ್ಞರ ಸಮಿತಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆಗಳನ್ನು ನೀಡಿದೆ.

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಇಂದು ಸಿಎಂ ಬಿಎಸ್‍ವೈ ಅವರು ತಜ್ಞ ವೈದ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳ ಬಗ್ಗೆ ತಜ್ಞರಿಂದ ಸಲಹೆಗಳನ್ನು ಪಡೆದರು. ಸಭೆಯಲ್ಲಿ ತಜ್ಞ ವೈದ್ಯರು, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ಸಚಿವರು, ಅಧಿಕಾರಿಗಳು ಹಾಜರಿದ್ದರು.

CM BSY

ಸಭೆಯ ಮುಖ್ಯಾಂಶಗಳೇನು?
1. ಸಭೆಯಲ್ಲಿ ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸುವ ಕುರಿತು ಚರ್ಚಿಸಲಾಯಿತು.

2. ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಂ ಐಸೋಲೇಷನ್) ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟರು.

3. ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು.

4. ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

5. ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಲಹೆ ನೀಡಿದ್ದಾರೆ.

6. ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿದೆ.

7. ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ.

8. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು.

9. ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ.

10. ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್‍ವೈ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *