– ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ
ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇನ್ನೊಂದು ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವ ನಿರೀಕ್ಷೆಯಿದ್ದು, ಇದರಿಂದ ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ. ಸಂಸದರು, ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/zTKJWibjOX
— B.S. Yediyurappa (@BSYBJP) October 19, 2020
ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ ಕೈಗೊಳ್ಳಲು ಸಾಧ್ಯವಾಗಲಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.
ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದರು.
ಇತ್ತ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಕಲ್ಲುವಡ್ಡು ಏತನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ 3,430 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ. ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಠಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ. ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು ಅ.21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ. ಅಕ್ಕಮಹಾದೇವಿ ಅವರ ಜನ್ಮಸ್ಥಳವಾದ ಉಡುತಡಿಯನ್ನು ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಗಂಗೆ’ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಇಂದು ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು, ತೋಟಗಾರಿಕೆ ಮತ್ತು ಪೌರಾಡಳಿತ ಸಚಿವರು, ಲೋಕಸಭಾ ಸದಸ್ಯರು, ಶಾಸಕರುಗಳು, ಗಣ್ಯರು ಉಪಸ್ಥಿತರಿದ್ದರು. pic.twitter.com/hWgviPlUfP
— B.S. Yediyurappa (@BSYBJP) October 19, 2020
ಮುಖ್ಯಮಂತ್ರಿ ಅವರು 125 ಕೋಟಿ ರೂ. ವೆಚ್ಚದ ಕಸಬಾ ಏತ ನೀರಾವರಿ ಯೋಜನೆ, 17.80 ಕೋಟಿ ರೂ. ವೆಚ್ಚದಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಕಾಮಗಾರಿ, 16ಕೋಟಿ ರೂ. ವೆಚ್ಚದ ಸನ್ಯಾಸಿಕೊಪ್ಪ ಏತ ನೀರಾವರಿ ಕಾಮಗಾರಿ ಹಾಗೂ 8.33 ಕೋಟಿ ರೂ. ವೆಚ್ಚದ ಭಕ್ತನಕೊಪ್ಪ ವಿದ್ಯುತ್ ಉಪಕೇಂದ್ರ, 9 ಕೋಟಿ ರೂ. ವೆಚ್ಚದ ಅಂಬಾರಕೊಪ್ಪ ವಿದ್ಯುತ್ ಉಪಕೇಂದ್ರ ಸೇರಿದಂತೆ ನೂರಾರು ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ ಅವರು ಇದೇ ಸಂದರ್ಭದಲ್ಲಿ ತೊಗರ್ಸಿ ಹಾಗೂ ಬಿಳಕಿಯಲ್ಲಿ ನಿರ್ಮಿಸಿರುವ ಪಶು ಚಿಕಿತ್ಸಾ ಕೇಂದ್ರ, ಶಿಕಾರಿಪುರ ಹಾಗೂ ಶಿರಾಳಕೊಪ್ಪದಲ್ಲಿ ನಿರ್ಮಿಸಿರುವ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ, ಪೌರಾಡಳಿತ ಸಚಿವ ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.