ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಹಾಮಾರಿ ಕೊರೊನಾ ಅಬ್ಬರ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 11 ಜನ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ವಿಜಯನಗರ ಹಾಗೂ ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂದು 11 ಜನ ಖಾಸಗಿ ಕಾಲೇಜಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ವಿವಿಧ ಹಾಸ್ಟೆಲ್ ಗಳಲ್ಲಿ ಇವರನ್ನು ಪ್ರತ್ಯೇಕವಾಗಿರಿಸಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ 25 ಜನ ಎಮ್‍ಬಿಬಿಎಸ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.