ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಂಚಾರಿ ವಿಜಯ್ ಅವರು ಯುವ ಪ್ರತಿಭಾವಂತ ನಟನಾಗಿದ್ದರು. ನಾನು ಅವನಲ್ಲ ಅವಳು ಚಲನಚಿತ್ರದ ಅಭಿನಯಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಲಭಿಸಿತ್ತು. ಅವರ ನಿಧನದಿಂದ ರಾಜ್ಯದ ಚಲನಚಿತ್ರ ರಂಗಕ್ಕೆ ಆಘಾತವಾಗಿದೆ. ಮೃತರ ಕುಟುಂಬ, ಬಂಧುಮಿತ್ರರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶ್ರೀ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಸಂಚಾರಿ ವಿಜಯ್ ನಿಧನಕ್ಕೆ ಇಡೀ ಚಿತ್ರರಂಗ ಕಣ್ಣೀರು ಹಾಕುತ್ತಿದೆ. ಸೆಲೆಬ್ರಿಟಿಗಳು ಮಾತ್ರವಲ್ಲದೆ ರಾಜಕೀಯ ನಾಯಕರು ಕೂಡ ಕಂಬನಿ ಮಿಡಿಯುತ್ತಿದ್ದಾರೆ. ಅನೇಕರು ಆಸ್ಪತ್ರೆ ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಹಲವರು ಸೋಶಿಯಲ್ ಮೀಡಿಯಾ ಮೂಲಕವಾಗಿ ಕಂಬನಿ ಮೀಡಿಯುತ್ತಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಸ್ಯಾಂಡಲ್‍ವುಡ್‍ನ ನಟ ನಟಿಯರು ಅಭಿಮಾನಿಗಳು ಕಂಬನಿ ಮೀಡಿದಿದ್ದಾರೆ.