ಬೆಂಗಳೂರು: ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು 40 ಸಾವಿರ ಕ್ಯೂಸೆಕ್ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ಹೊರಹರಿವು ಉಂಟಾಗಿರುವುದರಿಂದ ನದಿ ಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.
Advertisement
ನಂಜನಗೂಡಿನ ಬಳಿ ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಬಳಿ ನಿಂತ ವ್ಯಕ್ತಿ ಮೇಲೆಯೇ ಮರ ಉರುಳಿ ಬಿದ್ದು, ವ್ಯಕ್ತಿ ಮೃತಪಟ್ಟಿದ್ದಾನೆ.
Advertisement
Advertisement
ಅಲ್ಲದೆ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಬಿಸಿಲೆಘಾಟ್‍ನಲ್ಲಿ ಭಾರೀ ಗಾತ್ರದ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಹೀಗಾಗಿ ಬಿಸಿಲೆ ಘಾಟ್‍ನಲ್ಲಿ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯ ಆಡಳಿತ ಮರಗಳನ್ನು ತೆರವು ಮಾಡುವ ಕಾರ್ಯಾಚರಣೆಗೆ ಮುಂದಾಗಿದೆ. ಸಕಲೇಶಪುರ ತಾಲೂಕಿನ ಹೆತ್ತೂರು, ಯಸಳೂರು, ಐಗೂರು, ಬನ್ನೂರು ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
Advertisement
ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಕೆಆರ್‍ಎಸ್ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 29,855 ಕ್ಯೂಸೆಕ್ ನೀರು ಒಳ ಹರಿವು ಇದ್ದು, ಹೊರ ಹರಿವು 4,715 ಕ್ಯೂಸೆಕ್ ಇದೆ. ಕೆಆರ್‍ಎಸ್ ಡ್ಯಾಮ್‍ನ ಇಂದಿನ ನೀರಿನಮಟ್ಟ 108.40 ಅಡಿ ಇದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಹಾಗೂ ಜಲಾಶಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಧ್ಯದಲ್ಲೇ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.