ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲ ಶಾಸಕರುಗಳಿಗೆ ನೀಡಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ಔದಾರ್ಯ ಪ್ರದರ್ಶಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರಿದ್ದಾರೆ.
ಕೊರೊನಾ ಸಂಕಷ್ಟ ಸಮಯದಲ್ಲಿ ಹಾಗೂ ಲಾಕ್‍ಡೌನ್ ನಂತರ ಜನಜೀವನ ತತ್ತರಗೊಂಡಿದೆ. ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿಗಳು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಮೂಲಕ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಆರ್ಥಿಕ ಸಂಪನ್ಮೂಲ ಸರಿದೂಗಿಸಿಕೊಂಡು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಹೆಚ್‍ಡಿಕೆ ಕೇಳಿಕೊಂಡಿದ್ದಾರೆ.