ಪರೀಕ್ಷೆ ರದ್ದಿಗೆ ಪ್ರಧಾನಿ ಗುಮ್ಮ ಕಾರಣ, ಶಿಕ್ಷಣ ಸಚಿವರ ಐಲು ಪೈಲು ನಿರ್ಧಾರ- ಎಚ್‍ಡಿಕೆ ಕಿಡಿ

Public TV
2 Min Read
SURESH HDK

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸೂಕ್ತ ದಿನಾಂಕಗಳಂದು ಎರಡು ದಿನಗಳ ಮಟ್ಟಿಗೆ ಅತ್ಯಂತ ಸರಳೀಕರಣಗೊಳಿಸಿ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಣ ಸಚಿವರ ಈ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು ಶಿಕ್ಷಣ ಸಚಿವರು ತೆಗೆದುಕೊಂಡಿರುವ ಎಡಬಿಡಂಗಿ ನಿರ್ಧಾರಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

ಟ್ವೀಟ್ ನಲ್ಲೇನಿದೆ..?
ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ.  ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್

ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು. ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಇದನ್ನೂ ಓದಿ: ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

ಎಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.

ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷಾ ವಿಚಾರವಾಗಿ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ

Share This Article
Leave a Comment

Leave a Reply

Your email address will not be published. Required fields are marked *