– ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಾರ್ಯಕ್ರಮ
– ಸ್ವಾತಂತ್ರ್ಯ ಹೋರಾಟಗಾರರಿಗೆ ಆಹ್ವಾನವಿಲ್ಲ
– ಸರ್ಕಾರದ ಮಾರ್ಗಸೂಚಿಯಂತೆ ಆಯೋಜನೆ
ಶಿವಮೊಗ್ಗ: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಸಮಾರಂಭದಲ್ಲಿ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕೊರೊನಾ ವಾರಿಯರ್ಸ್‍ಗಳನ್ನು ಗೌರವಿಸಲಾಗುವುದು.
ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಬಹುದಾಗಿದೆ. ಉಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.