ಶಿವಮೊಗ್ಗ ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ: ಬಿಎಸ್‍ವೈ

Public TV
2 Min Read
bsy chopper 02042020

– ಹೆಚ್‍ಡಿಕೆ, ಪ್ರಹ್ಲಾದ್ ಜೋಷಿ ಸಂತಾಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಕುರಿತಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಬಿಎಸ್‍ವೈ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್ ಲಾರಿ ಸ್ಫೋಟಗೊಂಡು 6ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *