– ಮೂರು ಕೋಟಿಗೂ ಅಧಿಕ ಬಿಲ್ ಬಾಕಿ!
ಹಾಸನ: ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲವೇ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಬರೋಬ್ಬರಿ ಮೂರು ಕೋಟಿಗೂ ಅಧಿಕ ರೂ.ಗಳ ಬಿಲ್ ಮೊತ್ತವನ್ನು ಗ್ರಾಮ ಪಂಚಾಯಿತಿ ಬಾಕಿ ಉಳಿಸಿಕೊಂಡಿದೆ.
ಗ್ರಾಮ ಪಂಚಾಯಿತಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗದೆ ಕಳೆದ ಏಳೆಂಟು ವರ್ಷಗಳಿಂದ ಸುಮಾರು ಮೂರು ಕೋಟಿಗೂ ಅಧಿಕ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಶ್ರವಣಬೆಳಗೂಳಕ್ಕೆ ದಿನನಿತ್ಯ ನೂರಾರು ಪ್ರವಾಸಿಗರು ಆಗಮಿಸುವುದರಿಂದ ಅವರಿಗೆ ಕುಡಿಯುವ ನೀರು ಪೂರೈಸಬೇಕು. ಅದಕ್ಕಾಗಿ ಹೇಮಾವತಿ ನದಿಯಿಂದ ನೀರು ತರಲಾಗಿದ್ದು, ಬೃಹತ್ ಯಂತ್ರಗಳು ಚಾಲನೆಯಲ್ಲಿರುತ್ತವೆ.
ಇಷ್ಟೇ ಅಲ್ಲದೇ ಮಹಾಮಸ್ತಕಾಭಿಷೇಕ ಸೇರಿದಂತೆ ಇನ್ನಿತರ ವಿಶೇಷ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಬಳಕೆಯಾಗುತ್ತದೆ. ಈ ಎಲ್ಲ ಕಾರಣದಿಂದ ಶ್ರವಣಬೆಳಗೂಳ ಗ್ರಾಮಪಂಚಾಯಿತಿಗೆ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬರುತ್ತಿದೆ. ಗ್ರಾಮ ಪಂಚಾಯಿತಿಗೆ ಬರುವ ಕಡಿಮೆ ಆದಾಯದಲ್ಲಿ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಶ್ರವಣಬೆಳಗೂಳಕ್ಕೆ ಬಿಲ್ ಪಾವತಿ ಮಾಡಲು ಹೆಚ್ಚಿನ ಅನುದಾನ ನೀಡಬೇಕು ಎಂದು ಸ್ಥಳೀಯ ಶಾಸಕ ಬಾಲಕೃಷ್ಣ ಮನವಿ ಮಾಡಿದ್ದಾರೆ.
ಪಂಚಾಯಿತಿಗೆ ಬರುವ ಆದಾಯದ ಇತಿಮಿತಿಯಲ್ಲಿ ತಿಂಗಳಿಗೆ ಎರಡು ಲಕ್ಷದಷ್ಟು ಬಿಲ್ ಕಟ್ಟುತ್ತಿದ್ದಾರೆ. ಆದರೆ ಒಂದು ತಿಂಗಳಿಗೆ ಸುಮಾರು 4 ಲಕ್ಷದವರೆಗೆ ಬಿಲ್ ಬರುವ ಕಾರಣ ಪ್ರತಿ ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಯುತ್ತಲೇ ಇದೆ. ಕೆಇಬಿಯವರು ಕೂಡ ಹಲವಾರು ಬಾರಿ ಬಿಲ್ ಪಾವತಿಸುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಶ್ರವಣಬೆಳಗೊಳ ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿರುವುದರಿಂದ ಸರ್ಕಾರ ಗ್ರಾಮ ಪಂಚಾಯಿತಿಗೆ ವಿದ್ಯುತ್ ಬಿಲ್ ಕಟ್ಟಲು ಹೆಚ್ಚಿನ ಅನುದಾನ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ನೋಡಲು ಪ್ರಪಂಚದ ಮೂಲೆ ಮೂಲೆಯಿಂದ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಇಲ್ಲಿರುವ ಬಾಹುಬಲಿ ಪ್ರತಿಮೆ ಸೇರಿದಂತೆ ಇನ್ನಿತರ ಇತಿಹಾಸ ಪ್ರಸಿದ್ಧ ಬಸದಿಗಳು ಪ್ರವಾಸಿಗರಲ್ಲಿ ಭಕ್ತಿಭಾವ ಮೂಡಿಸುತ್ತವೆ.