ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಇತ್ತೀಚೆಗೆ ಅವರ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಆಗ ಸಚಿವ ಈಶ್ವರಪ್ಪ ಅವರು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ಆದರೆ ಇಂದು ಪಾಸಿಟವ್ ಬಂದಿದೆ. ಸೋಮವಾರವಷ್ಟೇ ಸಚಿವ ಈಶ್ವರಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಕೋವಿಡ್ ವಾರ್ಡ್‍ಗಳ ಸ್ಥಿತಿಗತಿಯನ್ನು ವೀಕ್ಷಿಸಿದ್ದರು. ಅಲ್ಲದೆ ಕೋವಿಡ್ ವಾರ್ಡ್‍ಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮೆರಾ, ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಇದೀಗ ಸ್ವತಃ ಈಶ್ವರಪ್ಪನವರಿಗೇ ಸೋಂಕು ತಗುಲಿದೆ.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ, ಮೆಗ್ಗಾನ್ ಆಸ್ಪತ್ರೆಗೆ ಭೇಟಿ, ಆರಾಧನಾ ಸಮಿತಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಿದ್ದರು. ಸೂಡಾ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರ್ಯಕರ್ತರಿಗೆ ಸಚಿವರು ಖಾರವಾಗಿ ಎಚ್ಚರಿಸಿದ್ದರು.