ಚಾಮರಾಜನಗರ: ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯಲ್ಲಿ ಸಚಿವ ಸುರೇಶ್ ಕುಮಾರ್ ಗೆ ರೈತಸಂಘದ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶನ ಮಾಡಿದ ಘಟನೆ ನಡೆದಿದೆ.
ಪೊಲೀಸರು 20ಕ್ಕೂ ಹೆಚ್ಚು ರೈತ ಸಂಘದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಹಿಂತೆಗೆದುಕೊಳ್ಳಬೇಕು. ಅಲ್ಲದೇ ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಭೆ ಕರೆಯಬೇಕು ಎಂದು ಒತ್ತಾಯ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು.
ರಾಷ್ಟ್ರಿಯ ಹೆದ್ದಾರಿ 209ರ ಮೂಲಕ ಸಚಿವರು ಚಾಮರಾಜನಗರಕ್ಕೆ ಬರುತ್ತಿರುವ ವಿಷಯ ತಿಳಿದ ರೈತರು, ಮಂಗಲ ಗ್ರಾಮದ ಬಳಿ ಅವಿತು ಸಚಿವರು ಬರುತ್ತಿದ್ದಂತೆ ವಾಹನ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಸೇರಿದಂತೆ 20ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದ್ದಾರೆ.