ಹಾವೇರಿ: ಕೊರೊನಾ ಸೋಂಕಿಗೆ 45 ವರ್ಷದ ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಮೃತಪಟ್ಟ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್‍ಸ್ಟೇಬಲ್ ದುರುಗೇಶ್ ಚಲವಾದಿ ಕಳೆದ 23 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊರೊನಾ ಸೋಂಕು ದೃಡಪಟ್ಟು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕೋವಿಡ್‍ನಿಂದಾಗಿ ಹೆಡ್ ಕಾನ್‍ಸ್ಟೇಬಲ್ ಮೃತಪಟ್ಟಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ದೃಢಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಒಟ್ಟು 37 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ಧೃಡಪಟ್ಟಿದೆ. ಅದರಲ್ಲಿ 19 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನೂ 18 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಓರ್ವ ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಮೃತಪಟ್ಟಿದ್ದಾರೆ. ಕಳೆದ ತಿಂಗಳು ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಕೊರೊನಾ ಸೋಂಕಿನಿಂದ ಒಟ್ಟು ಇಬ್ಬರು ಮೃತಪಟ್ಟಿದ್ದಾರೆ.