– ಕೋವಿಡ್‍ನಿಂದ ಒಟ್ಟು 63 ಜನ ಸಾವು
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿ ದಿನ ನೂರಾರು ಪ್ರಕರಣ ಪತ್ತೆಯಾಗುತ್ತಿವೆ. ಇಂದು 144 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಲೂರು 2, ಬೇಲೂರು 15, ಹಾಸನ 94, ಅರಸೀಕೆರೆ 9, ಚನ್ನರಾಯಪಟ್ಟಣ 8, ಅರಕಲಗೂಡು 1, ಹೊಳೆನರಸೀಪುರ 11, ಸಕಲೇಶಪುರ 2 ಸೇರಿ ಒಂದೇ ದಿನ 144 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,275ಕ್ಕೆ ಏರಿಕೆಯಾಗಿದೆ. 1,022 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 1,190 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಇಬ್ಬರು ಮೃತಪಟ್ಟಿದ್ದು, ಕೊರೊನಾದಿಂದ ಈ ವರೆಗೆ 63 ಜನರ ಸಾವನ್ನಪ್ಪಿದ್ದಾರೆ.
ಯಾರಿಗಾದರೂ ಉಸಿರಾಟದ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಕಾಣಿಸಿಕೊಂಡರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಭೆ ಸಮಾರಂಭಗಳಲ್ಲಿ ಭಾಗವಹಿಸದಿರುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.