ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯನ್ನು ಬೆಂಗಳೂರಿನಂತೆ ಲಾಕ್‍ಡೌನ್ ಮಾಡಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 687 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 455 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 212 ಸಕ್ರಿಯ ಪ್ರಕರಣಗಳು ಇದ್ದು, 20 ಜನ ಇದುವರೆಗೂ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಹಾಸನ ಜಿಲ್ಲೆಯನ್ನು ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕನ್ನು 14 ದಿನ ಲಾಕ್‍ಡೌನ್ ಮಾಡಲು ನಿರ್ಧರಿಸಿದರೆ, ಹಾಸನ, ಅರಸೀಕೆರೆ, ಸಕಲೇಶಪುರ, ಹೊಳೆನರಸೀಪುರ ತಾಲೂಕಿನಲ್ಲಿ ಬೆಳಗ್ಗೆ ಆರರಿಂದ ಮಧ್ಯಾಹ್ನ ಮೂರವರೆಗೆ ಮಾತ್ರ ಅಂಗಡಿ ತೆರೆದು ನಂತರ ಬಂದ್ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಕೂಡ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಹಾಸನ ಜಿಲ್ಲೆಯ ಲಾಕ್‍ಡೌನ್ ಮಾಡುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ಪಡೆಯುತ್ತೇನೆ. ನಂತರ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.