– ಅಂತಿಮ ವರ್ಷದ ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಕೆ
– ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಿಎಂ ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಆಕ್ಸಿಜನ್ ಹಾಗೂ ಬೆಡ್ ಕೊರತೆಯಿಂದ ಜನ ನರಳುತ್ತಿದ್ದಾರೆ. ಇದರ ನಡುವೆ ಸರ್ಕಾರ ಸಭೆಗಳ ಮೂಲಕ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂದು ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.
ಮುಖ್ಯಮಂತ್ರಿ @BSYBJP ರವರ ಅಧ್ಯಕ್ಷತೆಯಲ್ಲಿ ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಕೋವಿಡ್ ರೋಗಿಗಳಿಗೆ ಹಾಸಿಗೆಗಳನ್ನು ಮೀಸಲಿಡುವ ಬಗ್ಗೆ ಸಭೆ ನಡೆಯಿತು. (1/2)#KarnatakaFightsCorona#Unite2FightCorona pic.twitter.com/Oy76ZKF3Du
— CM of Karnataka (@CMofKarnataka) May 1, 2021
ಇಂದು ಸಿಎಂ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆಸಲಾಗಿದ್ದು, ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಬಳಸಿಕೊಂಡು ಹೋಟೆಲ್‍ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು, ಸೆಂಟ್ರಲೈಸ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್ ಗಳನ್ನು ಐಸಿಯು ಬೆಡ್ ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗಿದೆ.
ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಗಾಗಿ ಸೂಕ್ತ ಇನ್ಸೆಂಟಿವ್ ನೀಡಿ ನರ್ಸಿಂಗ್, ಫಾರ್ಮಸಿ, ಫಿಜಿಯೋಥೆರಪಿ, ಆಯುಷ್ ವೈದ್ಯ, ದಂತ ವೈದ್ಯಕೀಯ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು. ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ನಲ್ಲಿ ನೋಂದಣಿ ಮಾಡಿಸಿ ಅವರನ್ನೂ ಬಳಸಿಕೊಳ್ಳಲು ಸಹ ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ.
ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣ ರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಲಕ್ಷಣ ರಹಿತ ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರಿಸುವುದು. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವ ಕುರಿತು ಚರ್ಚಿಸಲಾಗಿದೆ.
ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‍ಗಳನ್ನು ಸಾಮಾನ್ಯ ಬೆಡ್‍ಗಳಿಂದ ಆಕ್ಸಿಜನೇಟೆಡ್ ಬೆಡ್‍ಗಳಾಗಿ ಪರಿವರ್ತಿಸುವುದು, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು. ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಯನ್ನು ಗುರುತಿಸಿ ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ರೆಮ್‍ಡಿಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು. 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ ಕೋವಿಡ್ ಲಸಿಕೆ ಹಾಕುವುದಕ್ಕೆ ವೇಗ ನೀಡಲು ಸಹ ಕ್ರಮ ಕೈಗೊಳ್ಳುವ ಕುರಿತು ಸಹ ಚರ್ಚಿಸಲಾಗಿದೆ.
ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಇನ್ಸೆಂಟಿವ್ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೋಂಕಿತರಾದಲ್ಲಿ ಸರ್ಕಾರಿ ವೆಚ್ಚದಲ್ಲೇ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಸಹ ಕ್ರಮ ಕೈಗೊಳ್ಳಲಾಗಿದೆ.