1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ

Public TV
3 Min Read
BSY 7

– ರಾಜ್ಯ ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಉಪಕ್ರಮ

ಬೆಂಗಳೂರು : ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ‘ಕಲಿಕಾ ನಿರ್ವಹಣಾ ವ್ಯವಸ್ಥೆ’ (Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.ಅಶ್ವತ್ಥನಾರಾಯಣ ತಿಳಿಸಿದರು.

BSY 1 2 medium

ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಸಚಿವರು ಜಿಲ್ಲೆಗಳಿಂದ ಭಾಗಿಯಾಗುವರು ಹಾಗೂ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.

ಈ ಕಾರ್ಯಕ್ರಮ ಉನ್ನತ ಶಿಕ್ಷಣ ಇಲಾಖೆಯ ‘ವಿಜಯೀಭವ’, ಜ್ಞಾನನಿಧಿ ಯುಟ್ಯೂಬ್ ಚಾನೆಲ್‍ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‍ಬುಕ್ & ಟ್ವಿಟ್ಟರ್ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ. ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ..
https://youtube.com/c/VijayiBhava
https://youtube.com/c/JnanaNidhiDCE
https://www.facebook.com/Department-of-Collegiate-Education-100568944804207/
https://twitter.com/collegiate_of?s=09

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು. ಈ ಯೋಜನೆಗಾಗಿ ರಾಜ್ಯ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ. ಇದರ ಜತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಾಳೆಯ ಕಾರ್ಯಕ್ರಮದ ನಿಮಿತ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಮಾರ್ಟ್ ಕ್ಲಾಸ್ ರೂಂನ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ.

ಯಾವುದೇ ವಿದ್ಯಾರ್ಥಿ ಸಾಮಾಜಿಕ, ಆರ್ಥಿಕ ಅಥವಾ ಇನ್ನಾವುದೇ ಕಾರಣದಿಂದ ಕೋವಿಡ್ ಕಾಲದಲ್ಲಿ ಕಲಿಕೆಯಿಂದ ವಂಚಿತರಾಗಬಾರದು ಎನ್ನುವುದೇ ಟ್ಯಾಬ್ಲೆಟ್ ಪಿಸಿ ಯೋಜನೆಯ ಮುಖ್ಯ ಉದ್ದೇಶ. ಕೋವಿಡ್ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್ ಪಿಸಿಗಳ ಮೂಲಕ ಎಲ್‍ಎಂಎಸ್ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು.

ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್ ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳು ನೆರವಾಗುತ್ತವೆ.

Ashwath Narayan 2 2 medium

ಈ ಟ್ಯಾಬ್ಲೆಟ್‍ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್ ಬಳಕೆಯಿಂದ ಇವುಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್ ಬಳಕೆಯ ಮೂಲಕವೇ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು.

ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *