ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಇವತ್ತು ಪಾಠ ಮಾಡುವ ಮೇಷ್ಟ್ರು ಆಗಿದ್ದರು. ಸುಮಾರು ಒಂದು ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಸೈ ಎನಿಸಿಕೊಂಡರು.
ಗೃಹ ಕಚೇರಿ ಕೃಷ್ಣದಲ್ಲಿ ರಾಜ್ಯದ ನಾನಾ ಭಾಗಗಳಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸಿದರು. ಈ ವಿದ್ಯಾರ್ಥಿಗಳಿಗೆ ಸುಮಾರು ಒಂದು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಸಂವಿಧಾನದ ಪಾಠ ಮಾಡಿದರು. ಮುಖ್ಯಮಂತ್ರಿಗಳ ಪಾಠವನ್ನು ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ಮತ್ತಷ್ಟು ಮಾಹಿತಿ ಪಡೆದುಕೊಂಡರು. ಇದೇ ವೇಳೆ ಸಂವಿಧಾನ (Constitution) ಓದು ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಿಎಂ ಪ್ರಶಸ್ತಿ ಪ್ರದಾನ ಮಾಡಿದರು.
Advertisement
ಸಿಎಂ ಹೇಳಿದ್ದೇನು?
ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದರು. ಇದನ್ನೂ ಓದಿ: ದರ್ಶನ್ ಸೂಚನೆ ಮೇರೆಗೆ ಕಿಡ್ನಾಪ್ – ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ: ವಕೀಲರ ವಾದ
Advertisement
Advertisement
ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ. ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು.
Advertisement
ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ. ಭಾರತದಲ್ಲಿ (India) ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ.
ವಿದ್ಯೆ ಮತ್ತು ಸಂಪತ್ತು ಗಳಿಸುವ ಅವಕಾಶ ಶೂದ್ರರಿಗೆ ಮತ್ತು ಮಹಿಳೆಯರಿಗೆ ಇರಲಿಲ್ಲ. ಹೀಗಾಗಿ ಅಸಮಾನತೆ ಸೃಷ್ಟಿಯಾಯಿತು. ಅಪ್ಪ ಅಮ್ಮ ವಿದ್ಯಾವಂತರಾದರೆ ಮಾತ್ರ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡುತ್ತಾರೆ ಎನ್ನುತ್ತಾ ತಾವು ವಿದ್ಯಾಭ್ಯಾಸದಿಂದ ವಂಚಿತರಾಗಿ ಬಳಿಕ ವಿದ್ಯೆ ಕಲಿತು ವಕೀಲನಾದೆ.
ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಹೀಗಾಗಿ ಸಂವಿಧಾನ ಓದು ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಲಾಯಿತು. ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.
ಸಂವಿಧಾನ ದ್ರೋಹಿಗಳು ಸಮಾಜ ದ್ರೋಹಿಗಳು, ಜನ ವಿರೋಧಿಗಳೂ ಕೂಡ ಹೌದು. ಜಾತಿ, ಧರ್ಮದ ಹೆಸರಲ್ಲಿ ಒಬ್ಬರನ್ನು ಅಗೌರವದಿಂದ ಕಾಣುವುದು, ಮತ್ತೊಬ್ಬರು ಸಂವಿಧನೇತರ ಗೌರವ ನಿರೀಕ್ಷಿಸುವುದು ತಪ್ಪು. ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಮತ್ತು ಕರ್ಮಸಿದ್ದಾಂತವನ್ನು ಧಿಕ್ಕರಿಸಿದ್ದಾರೆ. ಆದರೆ ಇವತ್ತಿಗೂ ಇದು ಪೂರ್ತಿ ಹೋಗಿಲ್ಲ.
ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಒಂದು ಜಾತಿ, ಒಂದು ಧರ್ಮಕ್ಕೆ ಮಾತ್ರ ಈ ದೇಶ ಸೀಮಿತವಲ್ಲ ಎಂದು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.