ಗದಗ: ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ನಡೆದಿದೆ.
ನಂದಿ ಮಂಜಯ್ಯ ಮಠಪತಿ(14) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕನ ಸಾವಿನ ಹಿಂದೆ ಕೊಲೆಯ ಶಂಕೆ ವ್ಯಕ್ತವಾಗಿದೆ. ಕಣವಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ರ್ದುಘಟನೆ ನಡೆದಿದೆ.
ವಸತಿ ನಿಲಯದ ಹಿಂಬದಿಯ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದುಕೊಂಡ ಬಾಲಕನ ಕಾಲುಗಳು ನೆಲಕ್ಕೆ ತಾಗಿದ್ದು ಈ ಎಲ್ಲಾ ಅನುಮಾನಕ್ಕೆ ಕಾರಣವಾಗಿದೆ.
ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ಇದರಲ್ಲಿ ಎದ್ದು ಕಾಣುತ್ತಿದೆ. ಬಾಲಕ ಮೃತಪಟ್ಟ ವಿಷಯ ತಿಳಿದು ನಾಲ್ಕೈದು ಗಂಟೆಯಾದರೂ ಸ್ಥಳಕ್ಕೆ ಬಾರದ ಇಲಾಖೆಯ ಅಧಿಕಾರಿ ಖಾಜಾಹುಸೆನ್ ಮುದೋಳ ವಿರುದ್ಧ ಪಾಲಕರು ಹಾಗೂ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.
ಮೃತ ಬಾಲಕ ಮೂಲತಃ ರೋಣ ತಾಲೂಕಿನ ಅಸೂಟಿ ಗ್ರಾಮದವನಾಗಿದ್ದು ಕಣವಿ ವಸತಿ ನಿಲಯದಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಮುಳಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv