ಗಾಂಧಿನಗರ: ಗುಜರಾತ್‌ನ ಗಾಂಧಿನಗರ ಸಮೀಪದ ಕುಡಾಸನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಸುಮಾರು 10 ರಿಂದ 15 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಟ್ಟಡ ಕುಸಿದಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಅಧಿಕಾರಿಗಳ ಪ್ರಕಾರ, ಇದುವರೆಗೆ ಎಂಟು ಕಾರ್ಮಿಕರನ್ನು ಅವಶೇಷಗಳಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳನ್ನು ತೆರವುಗೊಳಿಸಿ ಅದರೊಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ತೀವ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸ್ಥಳದಲ್ಲಿ ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಗ್ನಿಶಾಮಕ ಅಧಿಕಾರಿ ರಾಜೇಶ್ ಪಟೇಲ್ ತಿಳಿಸಿದ್ದಾರೆ.
