– ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ 20ರಂದು ಸಿಎಂ ಚಾಲನೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ (Rural Development), ಗ್ರಾಮೀಣ ರಸ್ತೆಗೆ ಸಂಬಂಧಿಸಿದ 16,000 ಕೋಟಿ ರೂ. ಮೊತ್ತದ 2 ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ನ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತಿದ್ದರೆ, ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 6,000 ಕೋಟಿ ರೂ. ವೆಚ್ಚದಲ್ಲಿ ಗ್ರಾಮಗಳ ಆಂತರಿಕ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಜಿಬಿಎ ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ!
ಅಸ್ತಿತ್ವದಲ್ಲಿರುವ ಹಾಗೂ ಹಾಳಾಗಿರುವ ಡಾಂಬರು ರಸ್ತೆಗಳನ್ನು ಗುರುತಿಸಿ, ಅವುಗಳ ಅಭಿವೃದ್ಧಿ ಮಾಡಲು 7,000 ಕೋಟಿ ರೂ. ನೀಡಲಾಗಿದೆ. ಹಾಲಿ ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮತ್ತೊಂದು ಪದರ ಡಾಂಬರು ಹಾಕಲು 3,000 ಕೋಟಿ ರೂ. ಮೊತ್ತ ಒದಗಿಸಲಾಗುವುದು ಎಂದರು. ಇದನ್ನೂ ಓದಿ: ಕಬ್ಬು ಬೆಳೆಗಾರರ ಬೇಡಿಕೆ | ಕೇಂದ್ರ-ರಾಜ್ಯ ಸರ್ಕಾರದ ನಡುವೆ ಜಟಾಪಟಿ; ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವ ರಸ್ತೆಗಳನ್ನು 3 ವರ್ಷಗಳ ವಾರ್ಷಿಕ ನಿರ್ವಹಣೆ ಮಾಡಬೇಕಾಗುತ್ತದೆ. ಕಾಮಗಾರಿಯಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿ ಕಾಮಗಾರಿಯ ಪ್ರಾರಂಭದಲ್ಲಿ ಹಾಗೂ ಪೂರ್ಣಗೊಂಡ ನಂತರ ಜಿಪಿಎಸ್ ಆಧಾರಿತ ಫೋಟೋ ಮತ್ತು ವೀಡಿಯೋ ಚಿತ್ರೀಕರಣವನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲದಲ್ಲಿ ಮತ್ತೆ ಚಿರತೆ ಕಾಟ – ಮನೆ ಮುಂದೆ ಕಟ್ಟಿಹಾಕಿದ್ದ ಸಾಕು ನಾಯಿ ಮೇಲೆ ದಾಳಿ
ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಾಜ್ಯದ ಗ್ರಾ.ಪಂ.ಪರಿಮಿತಿಯ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳನ್ನು 6,000 ಕೋಟಿ ರೂ. ಮೊತ್ತದಲ್ಲಿ ನಿರ್ಮಿತಿ ಕೇಂದ್ರ, ಕೆ.ಆರ್.ಐ.ಡಿ.ಎಲ್.,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅಭಿವೃದ್ಧಿ ಪಡಿಸಲಾಗುವುದು. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಬೇರೆ ಯಾವುದೇ ಯೋಜನೆಯಡಿ ಕೈಗೆತ್ತಿಕೊಳ್ಳದಿರುವ ಬಗ್ಗೆ ಕಾರ್ಯಪಾಲಕ ಅಭಿಯಂತರರು ಡಿಪಿಆರ್ಪಿಯಲ್ಲಿ ಕಡ್ಡಾಯವಾಗಿ ದೃಢೀಕರಿಸಬೇಕು, ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಎನ್ಜಿಎಸ್ಕೆ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ನುಡಿದರು. ಇದನ್ನೂ ಓದಿ: ಶಬರಿಮಲೆಯಷ್ಟೇ ಪವಿತ್ರ ಕೊಡಗಿನ ತಲಕಾವೇರಿ! – ಭಕ್ತಿಭಾವ ಮರೆತು ಬರುವ ಪ್ರವಾಸಿಗರಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ?
ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 16 ಸಾವಿರ ಕೋಟಿ ರೂ. ಅನುಮೋದನೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಈಶ್ವರ ಖಂಡ್ರೆ ನಾಡಿನ ಜನರ ಪರವಾಗಿ ಧನ್ಯವಾದ ಅರ್ಪಿಸಿದರು. ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ವಿವಾಹಿತ ಮಹಿಳೆಯ ಕೊಲೆ – ವೇಲ್ನಿಂದ ಕುತ್ತಿಗೆ ಬಿಗಿದು ಹತ್ಯೆ ಶಂಕೆ
