ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ಮಂದಿ, ಕಲಬುರಗಿಯಲ್ಲಿ ಓರ್ವ ಸೇರಿ 19 ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕುರುಬರಹಳ್ಳಿಯ ರಾಜರಥದ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹತ್ಯೆ ಮಾಡಿದ ದೇಶದ್ರೋಹಿಗಳನ್ನು ಬಂಧಿಸಿ, ಹಿಂದೂಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ರಾಜಕುಮಾರ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, 18 ಮಂದಿ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಕಲಬುರಗಿ ಬಿಜೆಪಿ ಘಟಕದಲ್ಲೂ ರಾಜೀನಾಮೆ ಪರ್ವ ಮುಂದುವರೆದಿದೆ. ಚಿಂಚೋಳಿ ತಾಲೂಕಿನ ಬಿಜೆಪಿ ಓಬಿಸಿ ಮೋರ್ಚಾದ ಕಾರ್ಯದರ್ಶಿ ಜೈಪ್ರಕಾಶ್ ತಳವಾರ್ ತಮ್ಮ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮಗನನ್ನು ಸುಡಲಾಗಿದೆ: ಬಿಕ್ಕಿ ಬಿಕ್ಕಿ ಅತ್ತ ಪ್ರವೀಣ್ ತಾಯಿ
ಏನಿದು ಘಟನೆ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಮಳಿಗೆ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ವ್ಯವಹಾರ ಮುಗಿಸಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಪ್ರವೀಣ್ ಮೃತಪಟ್ಟಿದ್ದರು.