ದಾವಣಗೆರೆ: ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಮಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ದಾವಣಗೆರೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸ್ಪಷ್ಟನೆ ನೀಡಿದ್ದಾರೆ.
ಫ್ರಾನ್ಸ್ ನಿಂದ ದಾವಣಗೆರೆಗೆ ಮರಳಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾರ್ಚ್ 22ರಂದು ಫ್ರಾನ್ಸ್ ನ ಪ್ಯಾರಿಸ್‍ನಿಂದ ವ್ಯಕ್ತಿ ದಾವಣಗೆರೆಗೆ ಬಂದಿದ್ದರು. ಈ ಬಗ್ಗೆ ಜಿಲ್ಲಾ ಸರ್ವೇಕ್ಷಣ ಘಟಕಕ್ಕೆ ಮಾಹಿತಿ ತಿಳಿದ ತಕ್ಷಣ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಯಿತು. ಆಗ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬರದ ಹಿನ್ನೆಲೆ ವ್ಯಕ್ತಿಯನ್ನು 14 ದಿನಗಳು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿತ್ತು.
Advertisement
Advertisement
ಆದರೆ ಮಾರ್ಚ್ 25ರಂದು ವ್ಯಕ್ತಿಯಲ್ಲಿ ಕೆಮ್ಮು, ಗಂಟಲು ನೋವು, ಜ್ವರ ಕಾಣಿಸಿಕೊಂಡಿದ್ದು ಅವರನ್ನು ತಪಾಸಣೆ ಒಳಪಡಿಸಲಾಗಿತ್ತು. ಇಂದು ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಒಟ್ಟು 18 ಮಂದಿ ಜೊತೆ ನೇರ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗಿದೆ.