ಹುಬ್ಬಳ್ಳಿ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಹಿನ್ನೆಲೆ ಜಿಲ್ಲಾಡಳಿತವು ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸಂಚಾರ ತಪಾಸಣೆಗೆ ಕ್ರಮ ಕೈಗೊಂಡಿದೆ. ಆದರೆ ಈ ಚೆಕ್‍ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಎನ್‍ಸಿಸಿ ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗಿದ್ದಕ್ಕೆ ಅವರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿಯ ಬಮ್ಮಾಪೂರದ ಚೆಕ್‍ಪೋಸ್ಟ್ ನಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗಿರುವ ಹುಬ್ಬಳ್ಳಿ ವಿದ್ಯಾನಗರದ ಬಿಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕಚೇರಿಯ ಸಿಬ್ಬಂದಿ ರವೀಂದ್ರ ಭೂಜಪ್ಪ ಆಸಂಗಿ ಹಾಗೂ ಮಹೇಶ್ ದುಂದೂರ ಅವರನ್ನು ಇಂದು ಅಮಾನತು ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ವಿಶ್ವವ್ಯಾಪಿ ಹರಡಿರುವ ಕೊವಿಡ್-19 ಮಹಾಸಾಂಕ್ರಾಮಿಕ ರೋಗಕ್ಕೆ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ. ಸೋಂಕು ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆ ಸ್ಥಾಪಿಸಿರುವ ಚೆಕ್‍ಪೋಸ್ಟ್ ಗಳಿಗೆ ಈ ನೌಕರರು ಹಾಜರಾಗದೇ ನಿಷ್ಕಾಳಜಿ ತೋರಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
Advertisement
Advertisement
ಈ ಸಿಬ್ಬಂದಿ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಕೊವಿಡ್-19, ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ನೌಕರರು ಅಮಾನತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ನಿರ್ದೇಶಿಸಿ ಶಿಸ್ತುಕ್ರಮ ಕೈಗೊಂಡಿದ್ದಾರೆ.