ಬಳ್ಳಾರಿ: ಕೊರೊನಾ ವೈರಸ್ ಗಣಿಜಿಲ್ಲೆಗೂ ಒಕ್ಕರಿಸಿತೆ ಎಂಬ ಅನುಮಾನ ಇದೀಗ ಎದ್ದಿದೆ.
ಹೊಸಪೇಟೆ ಹಾಗೂ ಸಂಡೂರು ತಾಲೂಕಿನ ತೋರಣಗಲ್ಲಿನರುವ ಜಿಂದಾಲ್ ನಲ್ಲಿ ಶಂಕಿತ ಎರಡು ಪ್ರಕರಣಗಳು ಪತ್ತೆಯಾಗಿವೆ. ಹೊಸಪೇಟೆಯಲ್ಲಿ ಕಾಣಿಸಿಕೊಂಡಿರುವ ಶಂಕಿತ ವ್ಯಕ್ತಿ ದುಬೈನಿಂದ ಬಂದಿದ್ದು, ಕೊರೊನಾದ ಲಕ್ಷಣಗಳು ಕಂಡು ಬಂದಿದೆ ಎನ್ನಲಾಗುತ್ತಿದೆ.
ಇಬ್ಬರು ವ್ಯಕ್ತಿಗಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಗುರುವಾರ ಬೆಂಗಳೂರಿಗೆ ಕಳುಹಿಸಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಇದು ಸಾಮಾನ್ಯ. ಹೊರಗಿನಿಂದ ಬಂದ ವ್ಯಕ್ತಿಗಳಿಗೆ ಇರಬಹುದು ಎಂಬ ಉದ್ದೇಶದಿಂದ ಪರೀಕ್ಷೆ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯ ಜನರಲ್ಲಿ ಕರೊನಾ ವೈರಸ್ ಇರುವ ಬಗ್ಗೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದಿದ್ದಾರೆ.
ಅಲ್ಲದೆ ಸಕಾಲಕ್ಕೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದು ಪ್ರಕರಣ ತೋರಣಗಲ್ಲಿನ ಜಿಂದಾಲ್ ಪ್ರದೇಶದಿಂದ ವರದಿಯಾಗಿದ್ದು, ಆ ವ್ಯಕ್ತಿಯ ರಕ್ತದ ಮಾದರಿಯನ್ನೂ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.