ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಖಯ್ನಾರ್ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು (Indian Army) ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಮೂವರು ಉಗ್ರರು ಬಲಿಯಾಗಿದ್ದಾರೆ.
ಉಗ್ರರು ಅಡಗಿದ್ದ ಸ್ಥಳದಲ್ಲಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂರು ಉಗ್ರರು ಹತ್ಯೆಗೀಡಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಖಯ್ನಾರ್ ಬಳಿ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಾದ ಬಳಿಕ ಸೇನೆ ಈ ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಕಳೆದ ಎರಡು ವಾರಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ವಲಸಿಗರ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿತ್ತು.
ಅ.20 ರಂದು ಉಗ್ರರು ಗಂದೇರ್ಬಾಲ್ ಜಿಲ್ಲೆಯ ಸುರಂಗ ನಿರ್ಮಾಣ ಸ್ಥಳದಲ್ಲಿ ಸ್ಥಳೀಯ ವೈದ್ಯ ಮತ್ತು ಇಬ್ಬರು ಕಾರ್ಮಿಕರು ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.