ಹಾಸನ: ಬಿಜೆಪಿ ಪಕ್ಷದಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20 ಶಾಸಕರು ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇಂದು ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯ 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಅವರೆಲ್ಲಾ ನಿರಂತರವಾಗಿ ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.
Advertisement
Advertisement
ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಸೋದರರಂತೆ ಕಳೆದ ಏಳು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲ ಸಮಯ ಸರ್ಕಾರ ಒಳಗೂ ಸೇವೆ ಸಲ್ಲಿಸಿದ್ದೇನೆ. ಈಗ ಪಕ್ಷ ಸಂಘಟಿಸಲು ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದರು.
Advertisement
ಬಿಜೆಪಿಯವರು ಮೊದಲು ತಮ್ಮ ಪಕ್ಷದ ಆಂತರಿಕ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮತ್ತ ಬೊಟ್ಟು ಮಾಡೋದು ಬೇಡ. ಬಿಜೆಪಿಯವರು ಏನೇ ಮಾಡಿದರು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆ ಹಾಗೂ ಜೆಡಿಎಸ್ ಪಕ್ಷದ ವಿಕಾಸ ಯಾತ್ರೆಯಿಂದ ನಮಗೇನು ಭಯವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ನಾವು ಚುನಾವಣೆ ಎದುರಿಸುತ್ತೇವೆ. ನಾನು ಸಿಎಂ ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಯಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಪಕ್ಷವಾಗಿದೆ. ನಾವು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಜನರನ್ನು ತಲುಪುತ್ತೇವೆ. ಪಕ್ಷದ ಸಾಧನೆಯನ್ನು ಪುಸ್ತಕ ರೂಪದಲ್ಲಿ ಬಿಡುಗಡೆಗೊಳಿಸಲಾಗಿದೆ. ನಾವು ಯಾವುದೇ ಯಾತ್ರೆಗಳನ್ನು ಮಾಡುವುದಿಲ್ಲ. ಆದರೆ 224 ಕ್ಷೇತ್ರಗಳಲ್ಲಿಯೂ ನಮ್ಮ ಕಾರ್ಯಕರ್ತರನ್ನು ಚುನಾವಣೆಗೆ ಸಿದ್ಧಗೊಳಿಸುತ್ತೇವೆ ಎಂದರು.