Connect with us

Districts

ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

Published

on

ರಾಮನಗರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಶುರುವಾಯ್ತಾ? ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತವಾದ ಅಭ್ಯರ್ಥಿ ಇಲ್ವಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಹೌದು. ಈ ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದ್ದು ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕನಕನ ಹಬ್ಬ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ್ದ ಯೋಗೇಶ್ವರ್ ಅವರನ್ನು ತೆಗಳಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅನಿತಾ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ, ಟೆಂಪರರಿ ನಾಯಕರು ಬರುತ್ತಾರೆ ಹೋಗುತ್ತಾರೆ. ಆದರೆ ನಿಮ್ಮ ಜೊತೆ ನಾವು ಶಾಶ್ವತವಾಗಿ ಇರುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಅನಿತಾ ಕುಮಾರಸ್ವಾಮಿಯವರು ನಿಮ್ಮಲ್ಲೆರನ್ನು ನಂಬಿ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಿಮ್ಮ ಜೊತೆಯಲ್ಲಿ ಯಾರು ಇಲ್ಲದೇ ಇದ್ದರೂ ನಾವಿದ್ದೇವೆ. ನಿಮ್ಮ ಹೆಣವನ್ನು ಹೊರುವವರು ನಾವೇ. ನಿಮ್ಮ ಪಲ್ಲಕ್ಕಿಯನ್ನ ಹೊರುವವರು ನಾವೇ ಎಂದು ಹೇಳುವ ಮೂಲಕ ಶಾಸಕ ಯೋಗೇಶ್ವರ್ ಅವರಿಗೆ ವೇದಿಕೆಯಲ್ಲೇ ಡಿಕೆಶಿ ಟಾಂಗ್ ನೀಡಿದರು.

ಕೆರೆ ಬಾಗಿನ ಕಾರ್ಯಕ್ರಮಗಳಲ್ಲಿ ಅವರ ಒಂದು ಫೋಟೋ ಕೂಡ ಹಾಕಿಲ್ಲ. ನಮಗೆ ಯಾರು ಸಹಾಯ ಮಾಡಿರುತ್ತಾರೆ ಅವರನ್ನು ನೆನೆಯಬೇಕು. ಸಹಾಯ ಮಾಡಿದವರನ್ನು ಸ್ಮರಿಸಬೇಕು. ನಾಲಿಗೆ ತಪ್ಪಬಾರದು ಆವಾಗ ಒಳ್ಳೆಯ ಮನುಷ್ಯ ಎನ್ನುತ್ತಾರೆ ಎಂದರು.

ನಾನು ರಾಜಕೀಯವನ್ನು ಬಿಡುವುದಿಲ್ಲ, ಚನ್ನಪಟ್ಟಣವನ್ನು ಬಿಡುವುದಿಲ್ಲ. ಯಾಕೆಂದರೆ ಚನ್ನಪಟ್ಟಣವನ್ನು ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ. ‘ನಾನು’ ಎಂದ ಎಲ್ಲಾ ಚಕ್ರವರ್ತಿಗಳು ಬಿದ್ದು ಹೋಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿ ಮತ್ತೊಮ್ಮೆ ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಅನಿತಾ ಕುಮಾರಸ್ವಾಮಿ ಅಭ್ಯರ್ಥಿ?
ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿಕೆಶಿ ಸರ್ವಪ್ರಯತ್ನ ನಡೆಸುತ್ತಿದ್ದು, ಈ ತಂತ್ರದ ಭಾಗವಾಗಿ ಅನಿತಾ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅನಿತಾರನ್ನೇ ಬೆಂಬಲಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬಂದಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಡಿಕೆಶಿ ಕಾರ್ಯಕ್ರಮದಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಿಂದ ಕೇಳಿಬಂದಿದೆ.

ಇದನ್ನೂ ಓದಿ: ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರ ಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೇ ಅಕ್ಟೋಬರ್ ನಲ್ಲಿ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

ಕೆಲ ದಿನಗಳಿಂದ ಅನಿತಾ ಕುಮಾರಸ್ವಾಮಿ ಅವರು ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿದ್ದು, ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಚನ್ನಪಟ್ಟಣದಿಂದ ಕಣಕ್ಕೆ ಇಳಿಯುವ ಆಸೆ ಇದೆ ಎಂದು ತಿಳಿಸಿದ್ದರು.

Click to comment

Leave a Reply

Your email address will not be published. Required fields are marked *