ಹಾವೇರಿ: ಸಾರಿಗೆ ನೌಕರರ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಹಾವೇರಿ ಜಿಲ್ಲೆಯ 28 ಜನ ಚಾಲಕ ಹಾಗೂ ನಿರ್ವಾಹಕರಿಗೆ ಸಾರಿಗೆ ಇಲಾಖೆ ಅಂತರ ಜಿಲ್ಲಾ ವರ್ಗಾವಣೆ ಮಾಡಿ ಶಾಕ್ ನೀಡಿದೆ.
ಹಾವೇರಿ ಜಿಲ್ಲೆಯಿಂದ ಧಾರವಾಡ, ಬೆಳಗಾವಿ, ಗದಗ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇಪ್ಪತ್ತೆಂಟು ಜನ ಚಾಲಕ ಹಾಗೂ ನಿರ್ವಾಹಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆಡಳಿತಾತ್ಮಕ ಹಾಗೂ ಸಂಸ್ಥೆಯ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಏಪ್ರಿಲ್ 10ರಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ವರ್ಗಾವಣೆ ಆದೇಶ ನೀಡಿದ್ದಾರೆ. ಮುಷ್ಕರಕ್ಕೆ ಬೆಂಬಲ ನೀಡಿದ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ಮೇಲೆ ಶಾಕ್ ನೀಡಿದ್ದಾರೆ. ಆದರೂ ನೌಕರರು ಮುಷ್ಕರ ಬಿಟ್ಟು ಸೇವೆಗೆ ಬರುತ್ತಿಲ್ಲ. ಜಿಲ್ಲೆಯಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ.