Thursday, 17th October 2019

Recent News

ನೀತಿ ಆಯೋಗದ ಮೊದಲ ಸಭೆಗೆ ಮೂವರು ಮುಖ್ಯಮಂತ್ರಿಗಳು ಗೈರು

ನವದೆಹಲಿ: ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ನೀತಿ ಆಯೋಗದ ಸಭೆಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ.

ನೀತಿ ಆಯೋಗದ ಐದನೇ ಆಡಳಿತ ಮಂಡಳಿ ಸಭೆ ಶನಿವಾರ ನಡೆದಿದ್ದು, ಸಭೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(ಕೆಸಿಆರ್) ಅವರು ಸಭೆಗೆ ಗೈರಾಗಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜನಯಗಳಿಸಿ ಅಧಿಕಾರದ ಗದ್ದುಗೆಯನ್ನೇರಿದ ಎನ್‍ಡಿಎ ಸರ್ಕಾರದ ಮೊದಲ ನೀತಿ ಆಯೋಗದ ಸಭೆಯನ್ನು ಮೂವರು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಮುಖ ನಾಯಕರು, ಅಧಿಕಾರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‍ಗಳು ಭಾಗವಹಿಸಿದ್ದರು.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಹವಾಮಾನದ ವೈಪರಿತ್ಯದಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ. ಅಮರಿಂದರ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕರೆದಿದ್ದ ಸಭೆಗೂ ಗೈರಾಗಿದ್ದಾರೆ.

ಕಾಲೇಶ್ವರಂ ನೀರಾವರಿ ಯೋಜನೆಗೆ ಚಾಲನೆ ನೀಡುತ್ತಿರುವ ಹಿನ್ನೆಲೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಟಿಆರ್‍ಎಸ್ ನಾಯಕ ಹಾಗೂ ಮಾಜಿ ಸಂಸದ ಬಿ.ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಧಿಕಾರಿಗಳು ಪ್ರತಿಕ್ರಿಯಿಸಿ ಗುರುವಾರದ ನಂತರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವ ಕುರಿತು ಕೆಸಿಆರ್ ಖಚಿತಪಡಿಸಿದ್ದರು. ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ರೈತಬಂಧು ಯೋಜನೆ ಕುರಿತು ನೀತಿ ಆಯೋಗದ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ತಯಾರಾಗಿದ್ದರು. ಈ ಯೋಜನೆ ವಿವಿಧ ರಾಜ್ಯಗಳಿಗೆ ಮಾದರಿಯಾಗಲಿದೆ ಎಂದು ಸಹ ಹೇಳಿದ್ದರು. ಆದರೆ, ದಿಢೀರನೆ ನೀತಿ ಆಯೋಗದ ಸಭೆಯನ್ನು ಕೆಸಿಆರ್ ತಿರಸ್ಕರಿಸಲು ಕಾರಣ ಏನೆಂಬುದು ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಲೇಶ್ವರಂ ನೀರಾವರಿ ಯೋಜನೆ ಉದ್ಘಾಟನೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಪ್ರಧಾನಿಗಳ ಭೇಟಿಗೆ ಅನುಮತಿ ಕೋರಿದ್ದರು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅನುಮತಿ ದೊರೆಯದ ಹಿನ್ನೆಲೆ ಕೆಸಿಆರ್ ಅವರು ಅಸಮಾಧಾನಗೊಂಡು ನೀತಿ ಆಯೋಗದ ಸಭೆಗೆ ಗೈರಾಗುತ್ತಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯೊಂದಿಗೆ ತಮ್ಮ ಅಸಮಾಧಾನವನ್ನು ಮುಂದುವರಿಸಿದ್ದು, ನೀತಿ ಆಯೋಗದ ಸಭೆಯಿಂದ ಏನೂ ಫಲಪ್ರದವಿಲ್ಲ. ರಾಜ್ಯದ ಯೋಜನೆಗಳಿಗೆ ಹಣ ನೀಡುವ ಅಧಿಕಾರ ನೀತಿ ಆಯೋಗಕ್ಕಿಲ್ಲ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *