ಬೆಂಗಳೂರು: ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡು ಕರ್ನಾಟಕ ಗಡಿ ಹೊಸೂರು- ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಇಂದು ನಡೆದಿದೆ.
ಹಬ್ಬಕ್ಕೆಂದು ತಮ್ಮ ಊರಿಗೆ ಕಾರಿನಲ್ಲಿದ್ದವರು ಹೋಗುವಾಗ ಈ ಅಪಘಾತ ಸಂಭವಿಸಿದೆ. ಸೂಳಗಿರಿ ಕಡೆಯಿಂದ ಹೊಸೂರು ಕಡೆಗೆ ಅತಿ ವೇಗವಾಗಿ ಕಾರು ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿದೆ.
ಕಾರು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪದೇ ಪದೇ ಇಂತಹ ಅಪಘಾತ ಪ್ರಕರಣಗಳು ನಡೆಯುತ್ತಿದ್ದರೂ ಲಾರಿಗಳನ್ನು ಹೆದ್ದಾರಿಯ ಬದಿಯಲ್ಲಿಯೇ ಚಾಲಕರು ನಿಲ್ಲಿಸುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.