ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಪರಿಸ್ಥಿತಿ ತಿಳಿಗೊಳಿಸುವಂತೆ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದರು, ಆದ್ರೆ ಪ್ರತಿಭಟನಾಕಾರರ ಬೇಡಿಕೆ ತಿರಸ್ಕರಿದ ಬಳಿಕ ಮತ್ತಷ್ಟು ಕ್ರೋಧಗೊಂಡು ವೀಡಿಯೋ ಪ್ರಸಾರ ಮಾಡಿದ ಸರ್ಕಾರಿ ಮಾಧ್ಯಮ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜುಲೈ 1ರಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.
ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರರೊಂದಿಗೆ ಘರ್ಷಣೆಗೆ ಇಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ರಬ್ಬರ್ ಬುಲೆಟ್ ಹಾಗೂ ಅಶ್ರುವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಹಿಮ್ಮೆಟ್ಟಿಸಿದರು.
ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.