ಡೆಹ್ರಾಡೂನ್: ಟ್ರಕ್ ಮತ್ತು ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಡೆಹ್ರಾಡೂನ್ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಚೌಕ್ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ತಕ್ಷಣ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಪಘಾತವು ಭೀಕರವಾಗಿದ್ದು, ನಮ್ಮ ತಂಡವು ತಕ್ಷಣವೇ ಸ್ಪಂದಿಸಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊತ್ವಾಲಿ ಪೊಲೀಸರ ಪ್ರಕಾರ ಅಪಘಾತವು ರಾತ್ರಿ 2 ಗಂಟೆಗೆ ಸಂಭವಿಸಿದೆ. ನಾವು ಎಲ್ಲಾ ಏಳು ಪ್ರಯಾಣಿಕರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸ್ಥಳಕ್ಕೆ ಬರುವಷ್ಟರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಒಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ಘಟನೆಯಲ್ಲಿ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಮೋಹನಪುರ ಪ್ರದೇಶದಲ್ಲಿ ಇಂದು ಮಹಿಳೆಯರ ಗುಂಪೊಂದು ತಮ್ಮ ಮನೆಯಲ್ಲಿ ಕಾರ್ಯಕ್ರಮಕ್ಕಾಗಿ ಮಣ್ಣು ಸಂಗ್ರಹಿಸಲು ಅಗೆಯುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ಮಹಿಳೆಯರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.