ಮಡಿಕೇರಿ: ಅನೈತಿಕ ಸಂಬಂಧದ ಹಿನ್ನೆಲೆ ನಾಲ್ಕು ವರ್ಷದ ಬಾಲಕನನ್ನು ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ಪಟ್ಟಣದ ಚಿಕ್ಕಪೇಟೆ ಲೈನ್ ಮನೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ಬಾಲಕನನ್ನು ಚರಣ್ (4) ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಾಲಕನ ತಾಯಿ, ಆಕೆಯ ಸಹೋದರಿ ಹಾಗೂ ಆರೋಪಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಕೇಳಿಬಂದಿದ್ದು, ಮಗುವಿನ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಮೂಲತಃ ರಾಯಚೂರು ಜಿಲ್ಲೆಯ ಪ್ರತಾಪ್ (45) ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ, ಪೊಲೀಸ್ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ, ಗ್ರಾಮಾಂತರ ಠಾಣೆಯ ಅಧಿಕಾರಿ ಜೆ.ಎನ್.ಲತಾ, ನಗರ ಠಾಣೆಯ ಇನ್ಸ್‌ಪೆಕ್ಟರ್ ಕಾವೇರಪ್ಪ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

