– 91 ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದೇ ಮೊಬೈಲ್ ಸಂಖ್ಯೆ ಬಳಸಿ ವಂಚನೆ ಆರೋಪ
ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (DCC Bank) 400 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಹಾಲಿ ಅಧ್ಯಕ್ಷ ಹಾಗೂ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದ ಡಿಸಿಸಿ ಬ್ಯಾಂಕ್ನ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಗೋವಿಂದೇಗೌಡ ಅಧ್ಯಕ್ಷರಾಗಿದ್ದ ಹಿಂದಿನ ಅವಧಿಯಲ್ಲಿ ಬ್ಯಾಂಕ್ನಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಈ ಸಂಬಂಧ ಸುಮಾರು 36 ರಿಂದ 37 ಪ್ರಕರಣಗಳಲ್ಲಿ ಕೆಲವು ದೂರು ದಾಖಲಾಗಿದ್ದು, ಕೆಲವು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ಹಾಗೂ ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ಪ್ರಕರಣಗಳ ತನಿಖೆ ನಡೆಸುತ್ತಿವೆ ಎಂದು ತಿಳಿಸಿದರು. ಆದರೆ, ಕೆಲವು ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಆರೋಪಿಸಿದ ಮಂಜುನಾಥ್, ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರುವ ಅಗತ್ಯವೇನಿದೆ? ತನಿಖೆ ನಡೆಯಲು ಅವಕಾಶ ಮಾಡಿಕೊಡಲಿ. ತಪ್ಪಿತಸ್ಥರಾಗಿದ್ದರೆ ತಪ್ಪಿತಸ್ಥರೆಂದು, ನಿರಪರಾಧಿಯಾಗಿದ್ದರೆ ನಿರಪರಾಧಿಯೆಂದು ಸಾಬೀತಾಗಲಿ ಎಂದು ಸವಾಲು ಹಾಕಿದರು.
ಇದೇ ವೇಳೆ, ಸ್ಟೇ ತರ್ತಿರೋದು ಮಾಜಿ ಅಧ್ಯಕ್ಷ ಗೋವಿಂದೇಗೌಡರು ಅಂತ ವ್ಯಂಗ್ಯವಾಗಿ ‘ನಮ್ಮ ದೊಡ್ಡವರು ಡಾನ್ ಗೋವಿಂದೇಗೌಡರು’ ಎಂದು ಕರೆದ ಮಂಜುನಾಥ್, 91 ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದೇ ಮೊಬೈಲ್ ಸಂಖ್ಯೆಯನ್ನು ಬಳಸಿ, ಪ್ರತಿ ಸಂಘಕ್ಕೆ ತಲಾ 5 ಲಕ್ಷ ರೂಪಾಯಿ ಸಾಲ ನೀಡಲಾಗಿದೆ. ಇದು ಅವ್ಯವಹಾರವಲ್ಲವೇ ಎಂದು ಪ್ರಶ್ನಿಸಿದರು.
ಈ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ತರುವ ಮೂಲಕ ತನಿಖೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಈಗಾಗಲೇ ತಂದಿರುವ ತಡೆಯಾಜ್ಞೆ ತೆರವುಗೊಳಿಸಲು ತಾವು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು. ತನಿಖೆ ವಿಳಂಬವಾಗುತ್ತಿರುವುದರಿಂದ ಬ್ಯಾಂಕ್ಗೆ ಆರ್ಥಿಕ ಹೊರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
