ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿ (Slum Development Board) ವತಿಯಿಂದ ಜನವರಿ 24 ರಂದು ಬಡ ಕುಟುಂಬಗಳಿಗೆ 42,345 ಮನೆಗಳನ್ನ ಹಂಚಿಕೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ತಿಳಿಸಿದ್ರು.
ಹುಬ್ಬಳಿಯಲ್ಲಿಂದು (Hubballi) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಜನವರಿ 24 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು. ಇದನ್ನೂ ಓದಿ: 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ – ಸಿಎಂ ಬೇಸರ
ಈಗಾಗಲೇ ಮೊದಲ ಹಂತದಲ್ಲಿ 36,789 ಮನೆಗಳನ್ನ ವಿತರಿಸಲಾಗಿದೆ. 2ನೇ ಹಂತದಲ್ಲಿ 42,345 ಮನೆಗಳನ್ನ ಹಂಚಿಕೆ ಮಾಡಲಾಗುತ್ತಿದೆ. ಮೂರನೇ ಹಂತದಲ್ಲಿ ಸುಮಾರು 30 ಸಾವಿರ ಮನೆಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. 3ನೇ ಹಂತದ ಮನೆಗಳನ್ನು ಏಪ್ರಿಲ್ – ಮೇ ತಿಂಗಳಲ್ಲಿ ವಿತರಿಸಲಾಗುವುದು. ಈಗ ನೀಡುತ್ತಿರುವ ಮನೆಗಳ ಪೈಕಿ ಹುಬ್ಬಳ್ಳಿಯಲ್ಲಿ 1,008 ಸೇರಿ ಧಾರವಾಡ ಜಿಲ್ಲೆಯಲ್ಲಿ 2,767 ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಯೋಜನೆಯಲ್ಲಿ ಒಟ್ಟು 1,80,253 ಮನೆಗಳು ನಿರ್ಮಾಣ ಆಗುತ್ತಿವೆ. ರಾಜ್ಯ ಸರ್ಕಾರ ತಲಾ 4 ಲಕ್ಷ ರೂ. ಕೊಡುತ್ತಿದ್ದು, ಜೊತೆಗೆ ಕೇಂದ್ರ ಸರ್ಕಾರದ ಸಬ್ಸಿಡಿಯೂ ಸಿಗಲಿದೆ. ಫಲಾನುಭವಿಗಳು 1 ಲಕ್ಷ ರೂ. ಪಾವತಿಸಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಳಗೇರಿಯ 20,363 ವಾಸಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದರು. ಇದನ್ನೂ ಓದಿ: ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು, ಸೈಬರ್ ಕ್ರೈಂ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ ಭರವಸೆ
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಮಾತನಾಡಿ, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡವರಿಗೆ ಸೂರು ಕಲ್ಪಿಸುವ ದೂರದೃಷ್ಟಿಯೊಂದಿಗೆ ಮನೆಗಳನ್ನು ನಿರ್ಮಿಸಿ, ವಿತರಣೆ ಮಾಡಲಾಗುತ್ತಿದೆ. ಆಸ್ಪತ್ರೆ, ಗ್ರಂಥಾಲಯ ಹಾಗೂ ಸಮುದಾಯ ಭವನವನ್ನ ಸಹ ಇದು ಒಳಗೊಂಡಿರಲಿದೆ. ಈಗಾಗಲೇ 860 ಮನೆಗಳನ್ನ ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ ಎಂದು ಅವರು ಹೇಳಿದರು.

