ಮಂಡ್ಯ: ಬೈಕ್ ಕಳ್ಳತನ ಆರೋಪದ ಮೇಲೆ ಜಿಲ್ಲೆಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತನ ಕುಟುಂಬದವರು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ.
ಮೂರ್ತಿ (40) ಪೊಲೀಸ್ ಠಾಣೆಯಲ್ಲೆ ಮೃತಪಟ್ಟ ಆರೋಪಿ. ಇವನು ಮೂಲತಃ ಜಿಲ್ಲೆಯ ಮದ್ದೂರು ತಾಲೂಕಿನ ಬೆಳ್ತೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಸೋಮವಾರ ಬೈಕ್ ಕಳ್ಳತನ ಆರೋಪದ ಮೇಲೆ ಜಿಲ್ಲೆಯ ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದರು. ಆದರೆ ಇಂದು ಬೆಳಗ್ಗೆ ಠಾಣೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೂರ್ತಿಯ ಮೃತದೇಹ ಪತ್ತೆಯಾಗಿದೆ.
Advertisement
ಘಟನೆ ಸಂಬಂಧ ಪಶ್ಚಿಮ ಠಾಣೆಯ ಪೊಲೀಸರು ಮಾತನಾಡಿ, ಬೈಕ್ ಕಳ್ಳತನ ಆರೋಪದಡಿ ಸೋಮವಾರ ಮೂರ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಆರೋಪಿ ಮೂರ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.
Advertisement
Advertisement
ಮೂರ್ತಿ ಮೇಲೆ ಪೊಲೀಸರು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ ಹಿನ್ನಲೆಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟರ್ ಜ್ಯೋತಿರವರು ಪೊಲೀಸ್ ಠಾಣೆಗೆ ಬಂದು ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಮೃತದೇಹವನ್ನು ಜಿಲ್ಲೆಯ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡಯ್ಯಲಾಯಿತು.
Advertisement
ಲಾಕಪ್ ಡೆತ್ ಎಂದು ತಿಳಿಯುತ್ತಿದ್ದಂತೆ ಶವಾಗಾರದ ಬಳಿ ಜಮಾಯಿಸಿದ ಕುಟುಂಬಸ್ಥರು ಹಾಗೂ ನೂರಾರು ಮಂದಿ ದಲಿತ ಸಂಘಟನೆಗಳ ಮುಖಂಡರು ಮಂಡ್ಯ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತ ಕುಟುಂಬಕ್ಕೆ ಪರಿಹಾರ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಮಂಡ್ಯ ಎಸ್ಪಿ ರಾಧಿಕಾರವರು, ಪಶ್ಚಿಮ ಪೊಲೀಸ್ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಲಾಗುವುದು, ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ನೀಡುವ ಕುರಿತು ಹೇಳಿಕೆ ನೀಡಿದ್ದಾರೆ.
https://www.youtube.com/watch?v=wChQSTtpjt4