ಡೆಹ್ರಾಡೂನ್: ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು ನುಗ್ಗಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಪಿಪಲ್‌ಕೋಟಿ (Pipalkoti) ಪ್ರದೇಶದಲ್ಲಿರುವ ಟಿಹೆಚ್‌ಡಿಸಿ ಜಲವಿದ್ಯುತ್ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಒಟ್ಟು 22 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಭಾರೀ ಪ್ರಮಾಣದಲ್ಲಿ ನೀರು ಹಾಗೂ ಮಣ್ಣಿನ ಅವಶೇಷಗಳು ಹರಿದುಬಂದಿದ್ದು, ರಭಸಕ್ಕೆ ಕೆಲವರು ಸುರಂಗದ ಹೊರಗೆ ತಳ್ಳಲ್ಪಟ್ಟಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು – 10 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ
ಅವಘಡದಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. 14 ಜನ ಕಾರ್ಮಿಕರು ಗಾಯಗೊಂಡಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕರನ್ನು ಜಾರ್ಖಂಡ್ (Jharkhand) ಹಾಗೂ ಛತ್ತೀಸ್‌ಗಢ (Chattisgarh) ಮೂಲದವರು ಎನ್ನಲಾಗಿದ್ದು, ಅವರ ಆರೋಗ್ಯದ ಬಗ್ಗೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಇಬ್ಬರು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಹೆಚ್ಚಾಗಿ ಕೆಲವು ದಿನಗಳ ಹಿಂದೆ ಸೇತುವೆಯೊಂದು ಕೊಚ್ಚಿಹೋಗಿದ್ದ ಹಿನ್ನೆಲೆ ಈ ದುರಂತ ಸಂಭವಿಸಿದೆ. ಸ್ಥಳೀಯ ಶಾಸಕ ಲಖಪತ್ ಬೋಟಲಾ ಹಾಗೂ ಜಿಲ್ಲಾಧಿಕಾರಿ ಗೌರವ್ ಕುಮಾರ್ ಅವರು ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.ಇದನ್ನೂ ಓದಿ: ವಿರಾಜಪೇಟೆಯಲ್ಲಿ ನಾಲ್ಕು ವರ್ಷದ ಬಾಲಕನ ಕೊಲೆ

