ಬೆಂಗಳೂರು: ನಗರದ ರಾಜಭವನ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್‍ನ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಜಯಪುರ ಜಿಲ್ಲೆ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ್ ಅವರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಳಿದಂತೆ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಧಾರವಾಡ ಜಿಲ್ಲೆಯ ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರು ಈಶ್ವರ ಹೆಸರಲ್ಲಿ, ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್ ಅವರು ತುಳುಜಾ ಭವಾನಿ, ಸಂಡೂರು ಶಾಸಕ ತುಕಾರಾಂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಶಾಸಕ ಎ.ಟಿ.ಬಿ.ನಾಗರಾಜ್ ದೇವರ ಹೆಸರಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂಗ್ಲಿಷ್‍ನಲ್ಲಿ ಪ್ರಮಾಣ ವಚನ:
ಬೀದರ್ ಶಾಸಕ ರಹೀಂಖಾನ್ ಅವರು ಇಂಗ್ಲಿಷ್‍ನಲ್ಲಿ ಅಲ್ಲಾಹನ ಮೇಲೆ ಪ್ರಮಾಣವಚನ ಸ್ವೀಕರಿಸಿದರು. ಸಚಿವರಾಗಿರುವ ಜಮೀರ್ ಅಹ್ಮದ್ ಸಹ ಇಂಗ್ಲಿಷ್‍ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
ರಾಜ್ಯಪಾಲ ವಜುಬಾಯ್ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಾಲಿ ಸಚಿವರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv