ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ (Ahmedabad) ನಗರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ (ಇಂದು) ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್‌ನ ರಾಮೋಲ್–ಗಾತ್ರಾಡ್ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಈ ಸ್ಫೋಟ (Blast) ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ, ಅದರ ಸದ್ದು ಸುಮಾರು 5 ಕಿಲೋಮೀಟರ್ ದೂರದವರೆಗೂ ಕೇಳಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ಕೇವಲ ನಮಗೆ ಅಜ್ಜಿಯಾಗಿರಲಿಲ್ಲ, ಇಡೀ ಕುಟುಂಬದ ದಾರಿದೀಪವಾಗಿದ್ದರು: ನಿಖಿಲ್ ಭಾವುಕ ಟ್ವೀಟ್
ಸ್ಫೋಟದಿಂದ ಕಾರ್ಖಾನೆಯ ಕಟ್ಟಡಕ್ಕೆ ಭಾರೀ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲೂ ಪರಿಣಾಮ ಉಂಟಾಗಿದೆ. ಘಟನೆಯ ಬಳಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ನಾಲ್ವರನ್ನ ಎಲ್‌ಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ಅಸರ್ವಾ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಳಿದ ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗ್ರಾಮೀಣ ಸಂಸ್ಕೃತಿಯಲ್ಲಿ ಬೆಳೆದ ಸರಳ ಸ್ವಭಾವದ ಮಹಿಳೆ – ಶಿಸ್ತು, ಸಂಪ್ರದಾಯಗಳಿಗೆ ಆದ್ಯತೆ ನೀಡುತ್ತಿದ್ದ ಚೆನ್ನಮ್ಮ
ಸ್ಫೋಟದ ಸದ್ದು ಕೇಳುತ್ತಿದ್ದಂತೆಯೇ RAF (ರ‍್ಯಾಪಿಡ್ ಆಕ್ಷನ್ ಫೋರ್ಸ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ಮುನ್ನವೇ ರಕ್ಷಣಾ ಕಾರ್ಯ ಆರಂಭಿಸಿದರು. ಅವಶೇಷಗಳಡಿ ಸಿಲುಕಿದ್ದವರನ್ನ ಹೊರತೆಗೆದು ಗಾಯಾಳುಗಳನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಂದಿಸಿ ಪರಿಸ್ಥಿತಿಯನ್ನ ನಿಯಂತ್ರಿಸಿತು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಪಟಾಕಿ ಕಾರ್ಖಾನೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿತ್ತು ಎನ್ನಲಾಗಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದ್ದು, ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
