ಕಲಬುರಗಿ: ರಾಜ್ಯ ವಿಧಾನಸಭಾ ಚುನಾವಣೆ (Vidhanasabha Election) ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಕಲಬುರಗಿ ಜಿಲ್ಲೆಯ ವಿವಿಧೆಡೆ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಬಳಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 84 ಸಾವಿನ ರೂಪಾಯಿ ಮೌಲ್ಯದ 198 ಲೀಟರ್ ಮದ್ಯ (Alcohol) ವನ್ನು ವಶಕ್ಕೆ ತೆಗೆದುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಶೇಖರ್ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೆ ಕಾರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂಬಾರ ಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಲೀಟರ್ ಕಲಬೆರಕೆ ಸೇಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅದರ ಜೊತೆಗೆ 15 ಸಾವಿರ ರೂಪಾಯಿ ಮೌಲ್ಯದ ಮದ್ಯ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಜಾರಕಿಹೊಳಿ – ಸವದಿ ಬಣ ರಾಜಕೀಯಕ್ಕೆ ಬ್ರೇಕ್; ಹೈಕಮಾಂಡ್ ಸಂದೇಶ ರವಾನಿಸಿದ ಜೋಶಿ
ಅದರಂತೆ ಸೇಡಂ ತಾಲೂಕಿನ ಬಟಗೇರಾ ಬಿ ಬಳಿ 51 ಲೀಟರ್ ಕ್ಕಿಂತ ಅಧಿಕ ಅಕ್ರಮವಾದ ಮದ್ಯವನ್ನು ವಶಕ್ಕೆ ಪಡೆಯಲಾಗಿದ್ದು, ಮದ್ಯ ಸಾಗಿಸುತ್ತಿದ್ದ ಆರೋಪಿ ಪರಾರಿಯಾಗಿದ್ದಾನೆ. ಒಂದು ಬೈಕ್ ಹಾಗೂ 20 ಸಾವಿರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡು, ಆರೋಪಿಯ ಬಂಧನಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಜಾಲ ಬೀಸಿದ್ದಾರೆ.