2 ಗಂಟೆ ಅಂತರದಲ್ಲಿ ಮೂರು ಕಡೆ ಬಾಂಬ್‌ ಬೆದರಿಕೆ – ದೆಹಲಿ ಪೊಲೀಸರು ಹೈ‌ ಅಲರ್ಟ್‌

Public TV
1 Min Read
Delhi Airport

– ದೆಹಲಿಯ 2 ಸರ್ಕಾರಿ ಆಸ್ಪತ್ರೆ, ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ!

ನವದೆಹಲಿ: ಇಲ್ಲಿನ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ (Delhi Hospitals) ಬಾಂಬ್‌ ಬೆದರಿಕೆ ಕೇಳಿಬಂದ ಎರಡು ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ (IGI Airport) ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು (Delhi Police), ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್‌ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್‌ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

IGI airport 2

ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. IGI ಟರ್ಮಿನಲ್-3 ರಲ್ಲಿ ಭಾನುವಾರ ಸಂಜೆ 6:19ಕ್ಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಸಿಐಎಸ್ಎಫ್ ಸಿಬ್ಬಂದಿಯನ್ನ ಅಲರ್ಟ್ ಮೋಡ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿ ಎನ್‌ಸಿಆರ್‌ನ ಸುಮಾರು 130 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದ ಕೆಲಕಾಲ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಬಳಿಕ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಿಂದ ತೆರವುಗೊಳಿಸಿ, ತೀವ್ರ ಶೋಧ ನಡೆಸಲಾಗಿತ್ತು.

ಇದೀಗ ಬಾಂಬ್‌ ಬೆದರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವಾಲಯ, ಬಾಂಬ್ ಬೆದರಿಕೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಬೆಂಗಳೂರಿನ ಶಾಲೆಗಳಿಗೂ ಬೆದರಿಕೆ ಬಂದಿದ್ದವು. ಈ ಬಗ್ಗೆ ಜನರು ವಿಚಲಿತರಾಗಬೇಕಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದಾರೆ.

Share This Article