ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ (Test Series) ಟೀಮ್ ಇಂಡಿಯಾ (Team India) ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಮುಂದುವರೆಯುವ ಸಾಧ್ಯತೆಯಿದೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿದೆ.
ಜೂನ್ 20ರಿಂದ ಇಂಗ್ಲೆಂಡ್ ವಿರುದ್ಧ ಶುರುವಾಗಲಿರುವ ಈ ಸರಣಿಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಹಿಂದೇಟು ಹಾಕಿದೆ ಎಂದು ವರದಿಯಾಗಿದೆ. ಬದಲಾಗಿ ಹಿಟ್‌ಮ್ಯಾನ್‌ಗೆ ಮತ್ತೊಂದು ಅವಕಾಶ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಜನವರಿಯಲ್ಲಿ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 3 ಪಂದ್ಯಗಳಲ್ಲಿ ಕೇವಲ 31 ರನ್‌ಗಳಿಸಿದ ನಂತರ, ರೋಹಿತ್ ಅವರು ನಾಯಕನಾಗಿ ಉಳಿಯುವ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿದ್ದವು. ಆದರೂ, ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ರೋಹಿತ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿತ್ತು. 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್ ಜಯ ಸಾಧಿಸುವ ಮೂಲಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
‘ರೋಹಿತ್ ಶರ್ಮಾ ಅವರು ತಮ್ಮ ಸಾಮರ್ಥ್ಯ ಏನೆಂಬುದನ್ನು ತೋರಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡವನ್ನು ಮುನ್ನಡೆಸಲು ಅವರು ಸರಿಯಾದ ಅಭ್ಯರ್ಥಿ ಎಂದು ಪ್ರತಿಯೊಬ್ಬ ಆಟಗಾರರೂ ಭಾವಿಸುತ್ತಾರೆ. ರೋಹಿತ್ ಕೂಡ ರೆಡ್-ಬಾಲ್ ಕ್ರಿಕೆಟ್ ಆಡುವುದನ್ನು ಮುಂದುವರಿಸುವ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಐಸಿಸಿ ಅಧಿಕೃತ ವೆಬ್‌ಸೈಟ್ ಪ್ರಕಾರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅನುಭವವು ಭಾರತದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಯಶಸ್ಸಿಗೆ ಬೆನ್ನೆಲುಬಾಗಿದ್ದರೂ, ತಂಡಕ್ಕೆ ಆಲ್‌ರೌಂಡರ್‌ಗಳಿಂದ ಅತ್ಯುನ್ನತ ಬೆಂಬಲ ಸಿಕ್ಕಿತು. ಟೂರ್ನಮೆಂಟ್‌ನಾದ್ಯಂತ ಅವರ ಆಲ್‌ರೌಂಡರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದರು ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.
ಒಂದು ವೇಳೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ವಿಫಲರಾದರೆ, ಬಿಸಿಸಿಐ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡುವುದು ಖಚಿತ. ಅಂದರೆ ಇದು ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರಿಗೆ ಕೊನೆಯ ಅವಕಾಶ.
ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ 5 ಇನಿಂಗ್ಸ್‌ಗಳಲ್ಲಿ ಕಲೆಹಾಕಿದ್ದು ಕೇವಲ 31 ರನ್‌ಗಳು ಮಾತ್ರ. ಹೀಗಾಗಿಯೇ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಆದರೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಲ್ಲದೇ, ನಾಯಕನಾಗಿಯೂ ಯಶಸ್ವಿಯಾಗಿದ್ದಾರೆ. ಹೀಗಾಗಿ ಇದೀಗ ಟೆಸ್ಟ್ ತಂಡದ ನಾಯಕತ್ವದಿಂದ ಅವರನ್ನು ಕೆಳಗಿಸಿಳಿದರೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ ಎಂಬ ನಿರ್ಧಾರಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಬಂದಿದೆ.
ಇದೇ ಕಾರಣದಿಂದ ಇದೀಗ ರೋಹಿತ್ ಶರ್ಮಾ ಅವರಿಗೆ ಮತ್ತೈದು ಪಂದ್ಯಗಳಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅದರಂತೆ ಜೂನ್ 20ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.