ಪಹಲ್ಗಾಮ್ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ, ಇಂತಹ ಉಗ್ರ ಸಂಘಟನೆಗಳನ್ನು ಸದೆಬಡೆಯಬೇಕು – ಡಿಕೆಶಿ

Public TV
2 Min Read
DK Shivakumar 2 2

– ಕೇಂದ್ರದಿಂದ ಸರ್ವಪಕ್ಷ ಸಭೆ ಕರೆಯಲಿ ಎಂದ ಡಿಸಿಎಂ

ಬೆಂಗಳೂರು: ಪಹಲ್ಗಾಮ್ (Pahalgam) ಉಗ್ರರ ದಾಳಿ (Terrorist Attack) ವಿಚಾರದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ, ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ (KPCC) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಗುಡ್ಡಕುಸಿತವಾಗಿದ್ದಕ್ಕೆ ಬಚಾವ್ – ಪಹಲ್ಗಾಮ್‌ಗೆ ಹೋಗಬೇಕಿದ್ದ 13 ಕನ್ನಡಿಗರು ಅದೃಷ್ಟವಶಾತ್ ಪಾರು

ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ (Congress) ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.

ಈ ಘಟನೆ ವಿದೇಶಾಂಗ ನೀತಿ, ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜೊತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದರು.

ಧರ್ಮದ ಆಧಾರದ ಮೇಲೆ ಹತ್ಯೆ ನಡೆಸಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಗುಪ್ತಚರ ಇಲಾಖೆ ವೈಫಲ್ಯ ಇದೆ ಎಂದು ಭಾವಿಸುತ್ತೀರಾ ಎಂದು ಕೇಳಿದಾಗ, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ; ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

Share This Article